Advertisement

Yakshagana; ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತ ಖ್ಯಾತಿಯ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

11:39 PM Dec 14, 2024 | Team Udayavani |

ಮಂಗಳೂರು: ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(78)  ಶನಿವಾರ(ಡಿ14) ವಯೋಸಹಜ ಅನಾರೋಗ್ಯದಿಂದ ಡಿ.14 ಸಂಜೆ ಬಜಪೆ ತಲಕಳದ ಸ್ವಗೃಹದಲ್ಲಿ ನಿಧನ ಹೊಂದಿದರು.

Advertisement

ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ.

ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.

ಬೆಳ್ತಂಗಡಿಯಲ್ಲಿ ಅರುವ ನಾರಾಯಣ ಶೆಟ್ಟಿ ಅವರ ಆಳದಂಗಡಿ ಮೇಳದಲ್ಲಿ ಪತಿ ಹರಿನಾರಾಯಣ ಬೈಪಾಡಿತ್ತಾಯ ಅವರರೊಂದಿಗೆ ಭಾಗವತಿಕೆ ಮಾಡಿ ಹಲವು ಯಕ್ಷಗಾನ ಕಲಾವಿದರನ್ನು ಕುಣಿಸಿ ಆ ಕಾಲದಲ್ಲಿ ಖ್ಯಾತಿ ಪಡೆದಿದ್ದರು. ಲೀಲಾವತಿ ಅಮ್ಮನವರ ಪದ್ಯ ಇದೆ ಎಂದು ಅನೇಕರು ಯಕ್ಷಗಾನಗಳಿಗೆ ಬರುತ್ತಿದ್ದರು.ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿಯೂ ಭಾಗವತಿಕೆ ಮಾಡಿದ್ದರು.

ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತಿದ್ದರು.  ಪತ್ರಕರ್ತ ಅವಿನಾಶ್ ಹಾಗೂ ಗುರುಪ್ರಸಾದ್ ಅವರ ಪುತ್ರರು.

Advertisement

ತೆಂಕುತಿಟ್ಟಿನ ಅಗ್ರಮಾನ್ಯ ಹಿಮ್ಮೇಳ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಕೈಹಿಡಿದ ಬಳಿಕ, ಯಕ್ಷಗಾನ ಕಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಎಂಬಲ್ಲಿನ ಪರಿಸರ ಅವರ ಯಕ್ಷಗಾನ ಕಲಿಕೆಗೆ ಪೂರಕವಾಗಿತ್ತು. ಮನೆ ಮನೆಯಲ್ಲೂ ವಿಶೇಷ ಕಾರ್ಯಕ್ರಮವಿದ್ದರೆ ಅಲ್ಲೊಂದು ತಾಳಮದ್ದಳೆ ಕೂಟ ಇದ್ದೇ ಇರುತ್ತಿತ್ತು. ಹೀಗೆ ಕಲಿಯುತ್ತಲೇ, ಹೆಣ್ಣು ಮಕ್ಕಳಿಗೆ ಯಕ್ಷಗಾನ ನೋಡುವುದಕ್ಕೂ ಅವಕಾಶವಿಲ್ಲದ ಸಂಪ್ರದಾಯವಿದ್ದ ಆ ಕಾಲದಲ್ಲಿ ತೆಂಕು ತಿಟ್ಟಿನ ಅಗ್ರಮಾನ್ಯ ಭಾಗವತರಲ್ಲೊಬ್ಬರಾಗಿ ಅವರು ಬೆಳೆದದ್ದು ಇತಿಹಾಸ. ಪರಿಣಾಮ ಏಕೈಕ ವೃತ್ತಿಪರ ಮಹಿಳಾ ಭಾಗವತರು ಎಂಬ ಪಟ್ಟ. ಪತಿಯೊಂದಿಗೆ ಅಂದಿನ ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕರ್ನಾಟಕ, ಅರುವ (ಅಳದಂಗಡಿ), ಕುಂಬಳೆ ಬಪ್ಪನಾಡು ಮೇಳ, ಕುಂಬಳೆ, ತಲಕಳ ಮುಂತಾದ ಡೇರೆ-ಬಯಲಾಟ ಮೇಳಗಳಲ್ಲಿ ನಿರಂತರ ಇಪ್ಪತ್ತು ವರ್ಷಗಳ ಕಾಲ ವೃತ್ತಿ ಕಲಾವಿದರಾಗಿಯೂ 17ಕ್ಕೂ ಹೆಚ್ಚು ವರ್ಷಗಳಿಂದ ಅತಿಥಿ ಕಲಾವಿದರಾಗಿಯೂ ಯಕ್ಷಗಾನಕ್ಕೆ ಸೇವೆ ಸಲ್ಲಿಸಿದ್ದಾರೆ.

ಯಕ್ಷಗಾನ ಲೋಕದಲ್ಲಿ ಬೆಳಗಿ ಕಲೆಯನ್ನೂ ಬೆಳೆಸಿದ ಕೀರ್ತಿವಂತರಾದ ಶೇಣಿ ಗೋಪಾಲಕೃಷ್ಣ ಭಟ್, ಬಣ್ಣದ ಮಾಲಿಂಗ,ಹೊಸಹಿತ್ಲು ಮಹಾಲಿಂಗ ಭಟ್, ಪಡ್ರೆ ಚಂದು, ಪುತ್ತೂರು ನಾರಾಯಣ ಹೆಗ್ಡೆ, ಅಳಿಕೆ ರಾಮಯ್ಯ ರೈ, ಕೆ.ಗೋವಿಂದ ಭಟ್, ಪುತ್ತೂರು ಕೃಷ್ಣ ಭಟ್, ಕೋಳ್ಯೂರು ರಾಮಚಂದ್ರ ರಾವ್, ಎಂಪೆಕಟ್ಟೆ ರಾಮಯ್ಯ ರೈ, ಕುಂಬಳೆ ಸುಂದರ ರಾವ್, ಶಂಕರನಾರಾಯಣ ಸಾಮಗರು, ರಾಮದಾಸ ಸಾಮಗರು, ಎಂ.ಎಲ್.ಸಾಮಗರು, ತೆಕ್ಕಟ್ಟೆ ಆನಂದ ಮಾಸ್ತರ್, ಪ್ರಭಾಕರ ಜೋಷಿ ಮುಂತಾದ ಯಕ್ಷಲೋಕದ ಘಟಾನುಘಟಿ ದಿಗ್ಗಜರನ್ನು ತಾಳಮದ್ದಳೆಯಲ್ಲಿ, ಯಕ್ಷಗಾನ ಪ್ರದರ್ಶನಗಳಲ್ಲಿ ಕುಣಿಸಿದ, ಮಾತನಾಡಿಸಿದ ಅನುಭವ ಪಡೆದುಕೊಂಡ ಲೀಲಾ ಅವರಿಗೆ, ಪ್ರತಿಯೊಂದು ಹೆಜ್ಜೆಯಲ್ಲಿಯೂ ಮಾರ್ಗದರ್ಶನ ಮಾಡಿ ಪ್ರೋತ್ಸಾಹಿಸುತ್ತಲೇ ಬಂದವರು ಪತಿ ಹರಿನಾರಾಯಣರು.

ಬಲಿಪ ನಾರಾಯಣ ಭಾಗವತರು, ದಾಮೋದರ ಮಂಡೆಚ್ಚರು, ಕಡತೋಕ ಭಾಗವತರು, ನೆಡ್ಲೆ ನರಸಿಂಹ ಭಟ್, ಬಲ್ಲಾಳರು, ದಿವಾಣ ಭೀಮ ಭಟ್, ಅಡೂರು ವೆಂಕಟ ಮದ್ಲೆಗಾರರು ಮುಂತಾದ ಅಗ್ರಗಣ್ಯ ಹಿಮ್ಮೇಳ ಕಲಾವಿದರ ಸಲಹೆ, ಮಾರ್ಗದರ್ಶನಗಳು ಅವರನ್ನು ಪ್ರಬುದ್ಧ ಕಲಾವಿದೆಯಾಗಿ ರೂಪಿಸಿದವು.

ಗಂಡು ಮೆಟ್ಟಿನ ಕಲೆಯಲ್ಲಿ ಅದರಲ್ಲೂ ವೀರರಸ ಪ್ರಧಾನ ಸನ್ನಿವೇಶಗಳಲ್ಲಿ ಹೆಣ್ಣು ಕಂಠವನ್ನು ಮೆರೆಸಿ, ಯಕ್ಷಗಾನ ಕಲೆಯತ್ತ ಮಹಿಳೆಯರೂ ಆಕರ್ಷಿತರಾಗುವಂತೆ ಮೇಲ್ಪಂಕ್ತಿ ಹಾಕಿಕೊಟ್ಟವರು ಅವರು. ರಾತ್ರಿಯಿಡೀ ನಿದ್ದೆಗೆಟ್ಟು ಊರಿಂದೂರಿಗೆ ಮೇಳವು ಹೋದಲ್ಲೆಲ್ಲಾ ತಿರುಗಾಟ ಮಾಡಿದ್ದಷ್ಟೇ ಅಲ್ಲದೆ, ರಾತ್ರಿಯಿಡೀ ನಿದ್ದೆ ಬಿಟ್ಟು ಬೆಳಗ್ಗಿನವರೆಗಿನ ಇಡೀ ಪ್ರಸಂಗವನ್ನು ಆಡಿಸಿದ ಕೀರ್ತಿಯೂ ಇದೆ. ಶಾಲೆಗೆ ಹೋಗದೆಯೂ ಭಾಗವತಿಕೆಯಲ್ಲಿ ವ್ಯಕ್ತವಾಗುವ ಸಾಹಿತ್ಯ ಶುದ್ಧಿ, ಭಾಷಾ ಶುದ್ಧಿ ಇವರ ಹೆಗ್ಗಳಿಕೆ. ಬಡಗುತಿಟ್ಟಿನಲ್ಲಿ ತಮ್ಮ ಛಾಪು ಬೀರಿ ನಂದಿದ ನಂದಾದೀಪ ಕಾಳಿಂಗ ನಾವಡರ ಜತೆಗೆ ಶೃಂಗೇರಿ ಹಾಗೂ ಮುಂಬಯಿಯಲ್ಲಿ ಹಾಡುತ್ತಾ, ಅವರ ಮೆಚ್ಚುಗೆಗೂ ಪಾತ್ರರಾದವರು ಶ್ರೀಮತಿ ಲೀಲಾ.

ಯಾವುದೇ ಪ್ರಸಂಗ ಆಡಿಸುವ ಮೊದಲು, ಹಿರಿಯ ಮತ್ತು ಕಿರಿಯ ಕಲಾವಿದರೊಂದಿಗೆ ಚೌಕಿಯಲ್ಲಿ ಮೊದಲೇ ಚರ್ಚಿಸಿ,ಪ್ರದರ್ಶನವೊಂದು ಎಲ್ಲೂ ಲೋಪವಾಗಬಾರದು, ಯಕ್ಷಗಾನದ ಭಾಷೆಯಲ್ಲೇ ಹೇಳುವುದಾದರೆ, ‘ಮೇಲೆ ಬೀಳಬೇಕು’ ಎಂಬ ತುಡಿತದಿಂದ,ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದ ರೀತಿ ಇಂದಿನ ಕಲಾವಿದರಿಗೆ ಸ್ಫೂರ್ತಿ.

ಸದ್ಯಕ್ಕೆ ತಮ್ಮಂತೆ ಇತರ ಮಹಿಳೆಯರೂ ಯಕ್ಷಗಾನ ಕ್ಷೇತ್ರದಲ್ಲಿ ಮುಂದೆ ಬರಬೇಕೆಂದು ಪ್ರೋತ್ಸಾಹಿಸುತ್ತಾ, ಆಸಕ್ತಿಯಿಂದ ಬಂದವರಿಗೆ ಯಕ್ಷಗಾನದ ಪಾಠವನ್ನೂ, ಕರ್ನಾಟಕ ಶಾಸ್ತ್ರೀಯ ಸಂಗೀತದ ಪಾಠವನ್ನೂ ಮಾಡಿದ್ದಾರೆ. ಅಲ್ಲದೆ ಪತಿಯೊಂದಿಗೆ ಧರ್ಮಸ್ಥಳದ ಪ್ರಖ್ಯಾತ ಯಕ್ಷಗಾನ ತರಬೇತಿ ಕೇಂದ್ರದಲ್ಲಿ 10 ವರ್ಷ ಹಾಗೂ ಈಗ ಕಟೀಲು, ಮೂಡುಬಿದಿರೆ, ಬಜಪೆ ಮುಂತಾದೆಡೆ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ.

ಲೀಲಾವತಿ ಬೈಪಾಡಿತ್ತಾಯರ ಅವರ ಕಲಾ ತಪಸ್ಸನ್ನು ರಾಜ್ಯ ಸರಕಾರ ಗುರುತಿಸಿ 2010ನೇ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. 2012ರಲ್ಲಿ ಕರ್ನಾಟಕ ಸರಕಾರ ಕೊಡಮಾಡಿದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿ, 2023ರಲ್ಲಿ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ. ಆಳ್ವಾಸ್ ನುಡಿಸಿರಿ, ಉಳ್ಳಾಲ ಅಬ್ಬಕ್ಕ ಪ್ರಶಸ್ತಿ‌ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಅಪಾರ ಯಕ್ಷಗಾನ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next