ಯಾದಗಿರಿ: ಪ್ರತಿ ವರ್ಷವೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿಸುವುದರಿಂದ ಅತೀವೃಷ್ಟಿಯಿಂದಾಗಿ ಸಂಭವಿಸುತ್ತಿರುವ ಹಾನಿ ತಡೆಯುವ ನಿಟ್ಟಿನಲ್ಲಿ ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಸೇತುವೆ 17 ಮೀಟರ್ ಎತ್ತರಿಸಲು ಪ್ರಸ್ತಾವನೆ ಸಿದ್ಧವಾಗಿದೆ ಎಂದು ಪಶು ಸಂಗೋಪನೆ, ವಕ್ಫ್ , ಹಜ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸೇತುವೆಯ ಈಗಿರುವ ಎತ್ತರ 6 ಮೀಟರ್‌ನಿಂದ 17 ಮೀಟರ್‌ಗೆ ಹೆಚ್ಚಿಸುವ ಕುರಿತಂತೆ 100 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಶೀಘ್ರ ಅನುದಾನ ಬಿಡುಗಡೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ಸದ್ಯ ಕೊಳ್ಳೂರು(ಎಂ) ಗ್ರಾಮದ ಸೇತುವೆ ಮುಳುಗಡೆಯಾಗಿದ್ದು ನದಿ ಪಾತ್ರದ ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ದೂರವಾಣಿ ಕರೆ ಮುಖಾಂತರ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿರುವ ಸಚಿವರು, ಸೇತುವೆ ಮುಳುಗಡೆಯಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿಯ ಬಗ್ಗೆ ವಿವರಣೆ ಪಡೆದಿದ್ದಾರೆ.ಮಹಾರಾಷ್ಟ್ರ ಸೇರಿದಂತೆ ವಿವಿಧಭಾಗಗಳಲ್ಲಿ ಭಾರೀ ಮಳೆಯಾಗಿರುವ ಪ್ರಯುಕ್ತ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.85 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳು ಜಲಾವೃತಗೊಂಡಿವೆ. ಈ ಭಾಗಗಳಲ್ಲಿ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆಗಳಿರುವುದರಿಂದ ಜನತೆಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸಬೇಕು. ಹಾಗೆಯೇ ಹಾನಿಗೆ ಒಳಗಾಗಬಹುದಾದ ಪ್ರದೇಶಗಳನ್ನು ಗುರುತಿಸಿ, ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಕೆಲಸವಾಗಬೇಕು ಎಂದು ನಿರ್ದೇಶನ ನೀಡಿದ್ದಾರೆ. ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ಎನ್‌ಡಿಆರ್‌ಎಫ್ ತಂಡ ಮತ್ತು ಬೋಟ್‌ಗಳನ್ನು ಕಳುಹಿಸಿ ತುರ್ತಾಗಿ ರಕ್ಷಣೆಗೆ ಧಾವಿಸಬೇಕು. ಅತೀವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿರುವ ಬೆಳೆ ಹಾನಿ ಕುರಿತಂತೆ ಸಮೀಕ್ಷೆ ನಡೆಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿನಿತ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.