ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ವೀರಪ್ಪ ಮೊಯ್ಲಿ ಸೋಲುತ್ತಾರೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭ್ರಮೆಯಲ್ಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿರುಗೇಟು ನೀಡಿದ್ದಾರೆ.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶದ ಪರಿಣಾಮವನ್ನು ಮೊದಲು ಎದುರಿಸುವವರೇ ಯಡಿಯೂರಪ್ಪ. ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಅವರೇ ತೊಂದರೆ ಅನುಭವಿಸುತ್ತಾರೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಟಕ ನಡೆಯುವುದಿಲ್ಲ. ದೇಶದ ರಾಜಕಾರಣವೇ ಬದಲಾಗುತ್ತಿದೆ. ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ.
ಬಿಜೆಪಿಯವರು ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಿಸುವ ಕನಸು ಕಾಣುತ್ತಿದ್ದಾರೆ. ರಾಜ್ಯದ ಜನರು ಮೈತ್ರಿ ಪಕ್ಷದ ಪರವಾಗಿದ್ದಾರೆ. ಬಿಜೆಪಿಯವರು ತಮ್ಮ ಜೊತೆ 20 ಕಾಂಗ್ರೆಸ್ ಶಾಸಕರಿದ್ದಾರೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಹೇಳಿದರು.
ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಾಗಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಊಹಾತ್ಮಕ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಮೇ 23ಕ್ಕೆ ಎಲ್ಲರೂ ಸೇರಿ ಸಂಭ್ರಮ ಆಚರಣೆ ಮಾಡುತ್ತೇವೆ ಎಂದು ಹೇಳಿದರು.
ದಿನೇಶ್ ಗುಂಡೂರಾವ್ ಹೇಳಿಕೆ: ಲೋಕಸಭೆ ಚುನಾವಣೆಯ ನಂತರ ಸಚಿವರಿಂದ ವರದಿ ಪಡೆದುಕೊಂಡಿದ್ದೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಇಪ್ಪತ್ತಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಎರಡು ಉಪ ಚುನಾವಣೆಗೆ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ. ನಾವೆಲ್ಲರೂ ಕ್ಷೇತ್ರಗಳನ್ನು ಹಂಚಿಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.