ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಒಂದು ಸಾವಿರ ಕೋಟಿ ರೂಪಾಯಿ ಕಪ್ಪಕಾಣಿಕೆ ನೀಡಿರುವ ಮಾಹಿತಿಗೆ ಸಂಬಂಧಿಸಿದಂತೆ ಡೈರಿ ನನಗೆ ಹೇಗೆ ಸಿಕ್ಕಿತ್ತು ಎನ್ನುವುದು ಬೇಡ. ನಿಮ್ಮ ಭ್ರಷ್ಟಾಚಾರ ಬಯಲಿಗೆಳೆಯುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 24ಗಂಟೆಗಳಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುಡುಗಿದ್ದಾರೆ.
ಸೋಮವಾರ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಗರದ ಟೌನ್ ಹಾಲ್ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.
ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸ್ತೇನೆ:
ಸಿದ್ದರಾಮಯ್ಯ ಅವರ ಗೊಡ್ಡು ಬೆದರಿಕೆಗೆ ಹೆದರಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ 24ಗಂಟೆಗಳಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬ ವರ್ಗಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಆದೇಶ ನೀಡುತ್ತೇನೆ. ಅಷ್ಟೇ ಅಲ್ಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಿದ್ದರಾಮಯ್ಯರನ್ನು ಜೈಲಿಗೆ ಕಳುಹಿಸ್ತೇನೆ ಎಂದು ಸವಾಲು ಹಾಕಿದರು.
ಟೌನ್ ಹಾಲ್ ಬಳಿ ಕಾಂಗ್ರೆಸ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.