ಕಲಬುರಗಿ: ‘ಉತ್ತರ ಕರ್ನಾಟಕದ ವಿಜಯಪುರ ಇಲ್ಲವೇ ಬಾಗಲಕೋಟೆ ಜಿಲ್ಲೆಯಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದು, ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮ್ಮ ಸ್ಪರ್ಧೆಯಿಂದ ಉತ್ತರ ಕರ್ನಾಟಕ ಹೈದ್ರಾಬಾದ್-ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಹೆಚ್ಚು ಅನುಕೂಲವಾಗಲಿದೆ. ಉತ್ತರ ಕರ್ನಾಟಕದಲ್ಲಿ ತಮ್ಮೆದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲು ಬರುವುದಾದರೆ ಬರಲಿ, ಸ್ವಾಗತವಿದೆ’ ಎಂದು ಹೇಳಿದರು. ರಾಜ್ಯ ಸರಕಾರ, ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಸೆ.23 ಇಲ್ಲವೇ 24ರಂದು ಸಿಎಂ ಸಿದ್ದರಾಮಯ್ಯ ಕುಟುಂಬ ಹಾಗೂ ನಾಲ್ಕೈದು ಸಚಿವರು, ಶಾಸಕರು, ಅಧಿಕಾರಿಗಳ ಭ್ರಷ್ಟಾಚಾರದ ಆರೋಪ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದರು. ನ.1ರಂದು ಕರ್ನಾಟಕ ಪರಿವರ್ತನಾ ರ್ಯಾಲಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಸೂರ್ಯಕಾಂತ ನಾಗಮಾರಪಳ್ಳಿ ಬಿಜೆಪಿಗೆ
ಬೀದರ್: ಮಾಜಿ ಸಚಿವ ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರ ಪುತ್ರ ಸೂರ್ಯಕಾಂತ ಹಾಗೂ ಅವರ ಬೆಂಬಲಿಗರು ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆಯಾ ಕ್ಷೇತ್ರಗಳಲ್ಲಿ ಜನಪ್ರಿಯತೆ ಗಳಿಸಿರುವ ಮತ್ತು ಗೆಲ್ಲುವ ಸಾಮರ್ಥ್ಯವುಳ್ಳ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು ಎಂದರು. ಮಾಜಿ ಡಿಸಿಎಂ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಸಂಸದ ಭಗವಂತ ಖೂಬಾ, ಶಾಸಕರಾದ ಪ್ರಭು ಚವ್ಹಾಣ, ರಘುನಾಥ ರಾವ್ ಮಲ್ಕಾಪುರ ಇನ್ನಿತರರು ಇದ್ದರು.