ಬಾಗಲಕೋಟೆ: ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಹಲವರು ತಿರುಕನ ಕನಸು ಕಾಣುತ್ತಿದ್ದಾರೆ. ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೀಳಗಿ ಕ್ಷೇತ್ರದ ಬಾದಾಮಿ ತಾಲೂಕಿನ ಕೆರಕಲಮಟ್ಟಿಯ ಕೇದಾರ ನಾಥ ಶುಗರ್ ಆವರಣದಲ್ಲಿ ನಡೆದ ಸುಮಾರು 990 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ.
ಆದರೆ ಕೆಲವರು ಮುಂದೆ ನಾನೇ ಸಿಎಂ ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಆ ಕನಸು ನನಸಾಗಲು ಸಾಧ್ಯವಿಲ್ಲ. ವರುಣಾದಿಂದ ಪುತ್ರ ವಿಜಯೇಂದ್ರ ಸ್ಪರ್ಧೆ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಅವರು ಕೈಗೊಳ್ಳುವ ತೀರ್ಮಾನವೇ ಅಂತಿಮ. ಮುಸ್ಲಿಮರ ಮೀಸಲಾತಿ ರದ್ದು ಮಾಡಿದ್ದಾರೆ ಎನ್ನುವ ಸಿದ್ದರಾಮಯ್ಯ ಎಲ್ಲದಕ್ಕೂ ವಿರೋಧ ಮಾಡುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಸಾಮಾಜಿಕ ನ್ಯಾಯದಡಿ ಕೆಲಸ ಮಾಡಿದ್ದಾರೆ. ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಕೊಡುವ ಪ್ರಯತ್ನ ಮಾಡಿದ್ದಾರೆ ಎಂದರು.