Advertisement

ಯೋಗ ದಿನ: ಹೆಚ್ಚಿನ ಜನರು ಭಾಗವಹಿಸಲಿ

06:19 PM Jun 11, 2022 | Team Udayavani |

ಮಂಡ್ಯ: ಜಿಲ್ಲೆಯಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇರುವುದರಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಅಶ್ವತಿ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂ.21ರಂದು ಬೆಳಗ್ಗೆ 7 ಗಂಟೆಯಿಂದ ಜಿಲ್ಲಾ ಮಟ್ಟದ ಯೋಗ ಕಾರ್ಯಕ್ರಮ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ಆವರಣದಲ್ಲಿ 45 ನಿಮಿಷ ಕ್ರಿಯಾತ್ಮಕ ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುವುದು ಎಂದು ವಿವರಿಸಿದರು.

ಮೂಲ ಸೌಕರ್ಯ ಒದಗಿಸಲು ಕ್ರಮ: ಯೋಗ ದಿನಾಚರಣೆಯಲ್ಲಿ ಭಾಗವಹಿಸುವಂತಹ ಎಲ್ಲಾ ಯೋಗಪಟುಗಳಿಗೆ ಯೋಗ ಮಾಡಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಬೇಕು. ಪಾರ್ಕಿಂಗ್‌ ವ್ಯವಸ್ಥೆ, ಉಪಹಾರದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ವ್ಯವಸ್ಥೆ ಸೇರಿ ಎಲ್ಲ ಮೂಲ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜೂ.18ರಂದು ಯೋಗ ಪಟುಗಳ ಸಮ್ಮುಖದಲ್ಲಿ ಪೂರ್ವಾಭ್ಯಾಸ ಮಾಡಿ ಜಿಲ್ಲಾ ಧಿಕಾರಿಗಳ ಕಚೇರಿಯವರೆಗೆ ಜಾಥಾ (ಯೋಗನಡಿಗೆ)ಕಾರ್ಯಕ್ರಮ ನಡೆಯಲಿದೆ. ಯೋಗ ಸಂಸ್ಥೆಗಳು, ಆಯುಷ್‌ ಇಲಾಖೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಚಾಲಕರು ಜಿಲ್ಲಾ ಎನ್‌ಎಸ್‌ಎಸ್‌, ಎನ್‌ಸಿಸಿ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಆಯುಷ್‌ ಯೋಗ ತರಬೇತುದಾರರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗ ತರಬೇತುದಾರರು ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ವಿ.ಆರ್‌.ಶೈಲಜಾ, ಪಾಂಡವಪುರ ಎಸಿ ಬಿ.ಸಿ.ಶಿವಾನಂದಮೂರ್ತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್‌, ಆಯುರ್ವೇದ ವೈದ್ಯಾಧಿಕಾರಿ ಡಾ.ಪುಷ್ಪಾ, ರೆಡ್‌ ಕ್ರಾಸ್‌ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಯೋಗ ಶಿಕ್ಷಕರಾದ ಶಿವರುದ್ರಸ್ವಾಮಿ, ಶಾಂತ ನಾರಾಯಣಶಾಸ್ತ್ರಿ, ಸಾವಿತ್ರಿ, ಸರಸನಂದನ್‌, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next