Advertisement
ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13 ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು.
Related Articles
Advertisement
ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು, ಈ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಸೂಚಿಸಿದರು.
ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 5 ತಾಣಗಳಾದ ಮೈಸೂರು, ಹಳೇಬೀಡು, ಹಂಪಿ, ಪಟ್ಟದಕಲ್ ಹಾಗೂ ವಿಜಯಪುರದ ಗೋಲಗುಂಬಜ್ ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ಹಂಪಿಯಲ್ಲಿ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಷಿ, ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಜ್ ನಲ್ಲಿ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಪಾಲ್ಗೊಳ್ಳಲಿದ್ದಾರೆ.
ಇದಲ್ಲದೆ ರಾಜ್ಯ ಮಟ್ಟದಲ್ಲಿ ರಾಜ್ಯದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಸಚಿವರಾದ ಡಾ. ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಯೋಜನೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.