ಮಂಗಳೂರು : ನಗರದಲ್ಲಿ ಸೆ. 17ರಂದು ಬೆಳಗ್ಗೆ 9ರಿಂದ 10 ಗಂಟೆಯ ವರೆಗೆ 50 ಸಾವಿರ ಯೋಗಪಟುಗಳಿಂದ ಯೋಗಥಾನ್ ಹಮ್ಮಿಕೊಳ್ಳಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಯೋಗಥಾನ್-2022ರ ಸಂಬಂಧ ಮಂಗಳ ವಾರ ನಡೆದ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಣ್ಣೀರುಬಾವಿ ಬೀಚಿನಲ್ಲಿ 40,000 ಹಾಗೂ ಮೂಡುಬಿದಿರೆಯ ಆಳ್ವಾಸ್ ಮೈದಾನದಲ್ಲಿ 10,000 ಯೋಗ ಪಟುಗಳು ಯೋಗ ಪ್ರದರ್ಶನ ನೀಡಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಂಬಂಧಿಸಿದ ಅಧಿಕಾರಿಗಳು ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
50 ಸಾವಿರಕ್ಕೂ ಹೆಚ್ಚಿನ ಯೋಗಪಟುಗಳ ನೋಂದಣಿಯಾಗಬೇಕು, ಕೂಡಲೇ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳ ಬೇಕು, ಈ ಯೋಗಪಟುಗಳನ್ನು ತಣ್ಣೀರು ಬಾವಿ ಬೀಚ್‌ಗೆ ಅಂದು ಕರೆತರಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿಗಳು, ಜಿಲ್ಲೆಯಲ್ಲಿರುವ ಮೆಡಿಕಲ್, ಎಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಈ ಯೋಗಥಾನ್‌ನಲ್ಲಿ ಭಾಗವಹಿಸಲು ಜಾಗೃತಿ ಮೂಡಿಸುವಂತೆ ಆಯಾ ಕಾಲೇಜುಗಳ ನೋಡಲ್ ಅಧಿಕಾರಿಗಳಿಗೆ ಸೂಚಿಸಬೇಕು, ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಬೇಕು, ಐಇಸಿ ಚಟುವಟಿಕೆಗಳನ್ನು ಕೂಡ ಹಮ್ಮಿಕೊಳ್ಳಬೇಕು ಎಂದು ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.
ಆಸನಗಳ ಮಾಹಿತಿ ನೀಡಿ
ಯೋಗಥಾನ್‌ನಲ್ಲಿ ಯಾವ ಯಾವ ಆಸನಗಳನ್ನು ಹೇಳಿಕೊಡಲಾಗುವುದು ಎಂಬ ಸಣ್ಣ ಸಣ್ಣ ವೀಡಿಯೋ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡಬೇಕು ಹಾಗೂ ಅದನ್ನು ಅಭ್ಯಾಸ ಮಾಡುವಂತೆ ಯೋಗಪಟುಗಳಿಗೆ ಕರೆ ನೀಡಬೇಕು ಎಂದು ಹೇಳಿದರು.
ಜಿ.ಪಂ. ಸಿಇಒ ಡಾ| ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ್ ವೇದಿಕೆಯಲ್ಲಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಇಕ್ಬಾಲ್,
ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಟರ್ ಪೇಟೆ, ಸಂಚಾರಿ ಎಸಿಪಿ ಗೀತಾ ಕುಲಕರ್ಣಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.