ಬೆಂಗಳೂರು: ಇದೇ ತಿಂಗಳ 28ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ ಅದ್ದೂರಿ ತೆರೆ ಎಳೆಯಲು ಮುಂದಾಗಿರುವ ಬಿಜೆಪಿ ಅದಕ್ಕೆ ಮುನ್ನ ಯಾತ್ರೆಯ ಸಮಾವೇಶದ ಮೂಲಕ ಬೆಂಗಳೂರಿನಲ್ಲಿ ಮತ್ತೂಂದು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಅದಕ್ಕಾಗಿ ಜ. 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಯಾತ್ರೆಯ ಸಮಾವೇಶಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕರೆಸುತ್ತಿದೆ.
ಜ. 7ರಂದು ವಿಜಯನಗರ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಪರಿವರ್ತನಾ ಯಾತ್ರೆಯ ಸಮಾವೇಶ (ಬೆಂಗಳೂರಿನಲ್ಲಿ ಮೂರನೆಯದ್ದು) ಸಮಾವೇಶ ನಡೆಯಲಿದ್ದು, ಇದರಲ್ಲಿ ಯೋಗಿ ಆದಿತ್ಯನಾಥ್ ಅವರು ಪ್ರಮುಖ ಆಕರ್ಷಣೆಯಾಗಿರುತ್ತಾರೆ. ಸಮಾವೇಶಕ್ಕೆ 50 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸೇರಿಸಲು ಬಿಜೆಪಿ ಮುಂದಾಗಿದೆ.
ಗುರುವಾರ ಸಮಾವೇಶದ ಸಿದ್ಧತೆಗಳ ಕುರಿತು ಬಿಜಿಎಸ್ ಆಟದ ಮೈದಾನದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯರೂ ಆಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಸೋಮಣ್ಣ, ಸಮಾವೇಶಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಲಾಗಿದ್ದು, ಕನಿಷ್ಠ 50 ಸಾವಿರ ಮಂದಿ ಪಾಲ್ಗೊಳ್ಳಲಿ¨ªಾರೆ ಎಂದು ಹೇಳಿದರು.
ಸಮಾವೇಶಕ್ಕಾಗಿ ಮೈದಾನದಲ್ಲಿ 50 ಸಾವಿರ ಮಂದಿ ಕುಳಿತುಕೊಳ್ಳಲು ಅವಕಾಶವಾಗುವಂತೆ ಬೃಹತ್ ಪೆಂಡಾಲ್ ಹಾಕಲಾಗಿದೆ. 240 ಅಡಿ ಉದ್ದ ಮತ್ತು 300 ಅಡಿ ಅಗಲದ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷ$ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯವ ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳುವುದರಿಂದ ಎಲ್ಲ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಕುಡಿಯುವ ನೀರು, ಊಟೋಪಚಾರದ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, ಸಮಾವೇಶಕ್ಕೆ ಯೋಗಿ ಆದಿತ್ಯನಾಥ್ ಬರುತ್ತಾರೆ ಎಂದರೆ ಅದು ಪಕ್ಷ ಹಿಂದುತ್ವ ಅಜೆಂಡಾ ಅಳವಡಿಸಿಕೊಳ್ಳುತ್ತಿದೆ ಎಂದು ಅರ್ಥವಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಎಂಬುದೇ ಬಿಜೆಪಿಯ ಧ್ಯೇಯ. ಅದನ್ನು ಬಿಟ್ಟು ವೋಟ್‌ಬ್ಯಾಂಕ್ ರಾಜಕಾರಣಕ್ಕಾಗಿ ಬೆಂಕಿ ಹಚ್ಚುವ ಇಲ್ಲವೇ ಹತ್ಯೆಗಳನ್ನು ಮಾಡಿಸುವ ಕೆಲಸ ಮಾಡುವುದಿಲ್ಲ ಎಂದರು.
ಪೂರ್ವಭಾವಿ ಸಭೆ: ಇದಕ್ಕೂ ಮುನ್ನ ಸಮಾವೇಶದ ಸಿದ್ಧತೆಗಳ ಬಗ್ಗೆ ಮೈದಾನದಲ್ಲಿ ಆರ್.ಅಶೋಕ್, ವಿ.ಸೋಮಣ್ಣ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪಾಲಿಕೆ ಬಿಜೆಪಿ ಸದಸ್ಯರು, ಪಕ್ಷದ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದರು. ಸಮಾವೇಶಕ್ಕೆ ಹೆಚ್ಚು ಜನರನ್ನು ಸೇರಿಸಿ ಯಶಸ್ವಿಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿದರು.