Advertisement

UP BJP; ಸಿಎಂ ಯೋಗಿ vs ಡಿಸಿಎಂ ಮೌರ್ಯ: ದೆಹಲಿಯಲ್ಲಿ ನಡೆದ ಮಹತ್ವದ ಮಾತುಕತೆ

02:17 PM Jul 17, 2024 | Team Udayavani |

ಹೊಸದಿಲ್ಲಿ: ಉತ್ತರ ಪ್ರದೇಶದ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯಾಡುತ್ತಿರುವುದು ಬಹಿರಂಗವಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭಿನ್ನಾಭಿಪ್ರಾಯದ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮೌರ್ಯ ಅವರು ಮಂಗಳವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Advertisement

ಉತ್ತರ ಪ್ರದೇಶದಲ್ಲಿ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುನ್ನ ಬಿಜೆಪಿ ಕಾರ್ಯತಂತ್ರ ಹಣೆಯುತ್ತಿರುವ ವೇಳೆ ಈ ವಿದ್ಯಮಾನ ನಡೆದಿದೆ. ಕಳೆದ ವಾರ, ಲಕ್ನೋದಲ್ಲಿ ನಡೆದ ಬಿಜೆಪಿಯ ಉತ್ತರ ಪ್ರದೇಶ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮೌರ್ಯ ಅವರು ತಮ್ಮ “ಸಂಘಟನೆ ಯಾವಾಗಲೂ ಸರ್ಕಾರಕ್ಕಿಂತ ದೊಡ್ಡದು” ಎಂಬ ಹೇಳಿಕೆ ನೀಡುವುದರೊಂದಿಗೆ ಚರ್ಚೆಗೆ ಗ್ರಾಸವಾಗಿದ್ದರು. ಅದೇ ಸಭೆಯಲ್ಲಿ ತಮ್ಮ ಭಾಷಣದಲ್ಲಿ ಯೋಗಿ ಆದಿತ್ಯನಾಥ್ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ನಿರೀಕ್ಷೆಗಳು ಮತ್ತು ಭರವಸೆಗಳನ್ನು ಘಾಸಿಯಾಗಲು “ಅತಿಯಾದ ಆತ್ಮವಿಶ್ವಾಸ” ಕಾರಣ ಎಂದಿದ್ದರು.

ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ಬಿಜೆಪಿಯನ್ನು ಮೀರಿದ ಸ್ಥಾನಗಳನ್ನು ಗೆದ್ದ ನಂತರ ಈ ಬೆಳವಣಿಗೆ ನಡೆದಿದೆ. ಕೇಶವ ಪ್ರಸಾದ್ ಮೌರ್ಯ ಮತ್ತು ನಡ್ಡಾ ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಯುಪಿಯ ಬಿಜೆಪಿಯ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಕೂಡ ನಡ್ಡಾ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿಯ ಉತ್ತರ ಪ್ರದೇಶ ಘಟಕ ಹಾಗೂ ಯೋಗಿ ಸಂಪುಟದಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆ ಇದ್ದು,  ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆಸಲಾಗಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ. ಯಾವುದೇ ಬದಲಾವಣೆಗಳಿದ್ದರೂ ರಾಜ್ಯದಲ್ಲಿ ಉಪಚುನಾವಣೆ ನಂತರವೇ ಆಗುವ ನಿರೀಕ್ಷೆಯಿದೆ.

Advertisement

ಲೋಕಸಭೆ ಚುನಾವಣೆಯಲ್ಲಿ ಭಾರಿ ಸಂಖ್ಯೆಯ ಸ್ಥಾನಗಳನ್ನು ನಿರೀಕ್ಷೆ ಮಾಡಿದ್ದ ಬಿಜೆಪಿ ಮೈತ್ರಿಕೂಟ ಉತ್ತರಪ್ರದೇಶದಲ್ಲಿ 80 ಸ್ಥಾನಗಳ ಪೈಕಿ(NDA) 36 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 43 ಸ್ಥಾನಗಳನ್ನು ಗೆದ್ದು ಬೀಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next