ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಕೆ.ಆರ್.ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿಕೊಂಡು ಕ್ಯಾಬ್ ಮುಳುಗಿ ಯುವತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಈ ದುರ್ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಸ್ಥೆಯ ಪೊಲೀಸ್ ವಿಭಾಗಕ್ಕೆ ಲೋಕಾಯುಕ್ತರು ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಧ್ಯಮಗಳಲ್ಲಿ ದುರ್ಘಟನೆ ಬಗ್ಗೆ ಬಿತ್ತರವಾದ ಅಂಶಗಳ ಆಧಾರದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು, ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಪೊಲೀಸ್ ವಿಭಾಗಕ್ಕೆ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ. ಜತೆಗೆ ಜೂನ್ 5 ರೊಳಗೆ ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೋಟಿಸ್ ಜಾರಿ ಮಾಡಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರು, ಉತ್ತರ ವಲಯ ಆಯುಕ್ತರು, ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, ಸಂಪಂಗಿರಾಮನಗರ ವಾರ್ಡ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್, ಬಿಬಿಎಂಪಿ ಮಳೆ ನೀರು ಕಾಲುವೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ಪ್ರಕರಣದಲ್ಲಿ ಪ್ರತಿವಾದಿಗಳೆಂದು ಸೇರಿಸಲಾಗಿದೆ.
ಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡುವುದು ಬಿಬಿಎಂಪಿ ಜವಾಬ್ದಾರಿ. ಈ ಪ್ರಕರಣದಲ್ಲಿ ಮಳೆ ನೀರು ಕಾಲುವೆ ವಿಭಾಗದ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಲೋಕಾಯುಕ್ತರು ಆದೇಶದಲ್ಲಿ ಉಲ್ಲೇಖೀಸಿದ್ದಾರೆ. ಮೇ 21ರಂದು ನಗರದಲ್ಲಿ ಸುರಿದ ಭಾರಿ ಮಳೆಗೆ ಕೆ.ಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕ್ಯಾಬ್ ಮುಳುಗಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಮೃತಪಟ್ಟಿದ್ದರು.