Advertisement

ಡಿಕೆಶಿ ಹುಟ್ಟುಹಬ್ಬ: ಮೈಷುಗರ್ ಕಾರ್ಖಾನೆಯ ಆವರಣದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

01:19 PM May 15, 2022 | Team Udayavani |

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಗರದ ಮೈಷುಗರ್ ಕಾರ್ಖಾನೆಯ ಆವರಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಪೊಲೀಸರು ಅಡ್ಡಿಪಡಿಸಿದ್ದರಿಂದ ಮೈಶುಗರ್ ಆವರಣದ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪರಿಣಾಮ ಪೊಲೀಸರು ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಸೇರಿದಂತೆ ಜಿಲ್ಲೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

Advertisement

ಮೈಷುಗರ್ ಕಾರ್ಖಾನೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಖಾನೆಯ ಆವರಣವನ್ನು ಸ್ವಚ್ಛಗೊಳಿಸುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದರು. ಅದರಂತೆ ಭಾನುವಾರ ಬೆಳಿಗ್ಗೆ ಎಲ್ಲ ಕಾರ್ಯಕರ್ತರು ಮೈಷುಗರ್ ಆವರಣಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಮೈಷುಗರ್ ಕಾರ್ಖಾನೆ ಆವರಣದೊಳಗೆ ಪ್ರವೇಶಿಸದಂತೆ ತಡೆಯೊಡ್ಡಿದರು.ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಸ್ಥಳದಲ್ಲಿಯೇ ಧರಣಿ ಆರಂಭಿಸಿದರು.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೆಲಕಾಲ ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮನವಿ ಮಾಡಿದರು. ಇದಕ್ಕೆ ಸೊಪ್ಪು ಹಾಕದ ಕಾರ್ಯಕರ್ತರು ಮೈಷುಗರ್ ಆವರಣಕ್ಕೆ ಪ್ರವೇಶ ನೀಡಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಮಾತಿನ ಚಕಮಕಿ ನಡೆಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಬೇಧಿಸಿ ಆವರಣದೊಳಗೆ ಪ್ರವೇಶ ಮಾಡಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟಗಳು ನಡೆದವು. ಅಲ್ಲದೆ, ಧರಣಿ ಕುಳಿತ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ಎಳೆದು ಹೊರಗೆ ಹಾಕಿದರು.

Advertisement

ಮಾತಿನ ಚಕಮಕಿ ನಡುವೆ ತಳ್ಳಾಟ ನೂಕಾಟ ನಡೆಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್, ರಾಜ್ಯ ಪ್ರಧಾನ ಕಾರ್ಯದರ್ಶಿ ಐಶ್ವರ್ಯ, ಮುಖಂಡರಾದ ಗಣಿಗ ರವಿಕುಮಾರ್, ಜಿಲ್ಲಾಧ್ಯಕ್ಷ ವಿಜಯಕುಮಾರ್, ಸಿ.ಡಿ.ಗಂಗಾಧರ್, ಎಂ.ಎಸ್.ಚಿದoಬರ್ ಸೇರಿದಂತೆ ಹಲವರನ್ನು ಬಂಧಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next