ಬೆಂಗಳೂರು: ಇಂಗ್ಲಿಷ್ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್ ನಡೆ ಇದೀಗ ಕನ್ನಡಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.
ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಹೋರಾಟಗಾರರು “ಸಚಿವ ಜಮೀರ್ ಅಹ್ಮದ್ ಖಾನ್ ಇನ್ನೂ ಕನ್ನಡ ಕಲಿಯದೇ ಇರುವುದು ನಾಚಿಕೆಗೇಡಿನ ಸಂಗತಿ’ ಎಂದು ವಾಗ್ಧಾಳಿ ನಡೆಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, “ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡಿನ ವಿಚಾರವಾಗಿದೆ’ ಎಂದು ಕಿಡಿಕಾರಿದ್ದಾರೆ. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಇನ್ನೂ ಕನ್ನಡ ಕಲಿಯದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಕರ್ನಾಟಕಕ್ಕೆ ಬರುವ ರಾಷ್ಟ್ರೀಯ ನಾಯಕರೇ ಕನ್ನಡದಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿರುವಾಗ ಈ ನಾಡಿನಲ್ಲೇ ಹುಟ್ಟಿರುವ ಜಮೀರ್ ಅಹ್ಮದ್ ಖಾನ್ ಅವರೇ ಇಷ್ಟು ವರ್ಷದಿಂದ ಇಲ್ಲೆ ಇದ್ದು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡೋಲ್ಲ ಅಂದ್ರೆ ನಿಮಗೇನು ಹೇಳ್ಳೋದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲು ಕನ್ನಡ ಮಿಕ್ಕಿದ್ದು ಆಮೇಲೆ. ನಿಮ್ಮ ಈ ನಡೆಗೆ ನಮ್ಮ ವಿರೋಧ ಇದೆ ಎಂದಿದ್ದಾರೆ.