ಬೆಂಗಳೂರು: ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು 10 ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಹಾಗೂ ನ್ಯಾ.ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಜಿ.ಪಂ.-ತಾ.ಪಂ. ಕ್ಷೇತ್ರಗಳ ಪುನರ್‌ವಿಂಗಡಣೆಗೆ ಸಂಬಂಧಿಸಿದಂತೆ ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಜ.30ರಂದು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಆ ವರದಿ ಆಧರಿಸಿ ರಾಜ್ಯ ಸರ್ಕಾರ 10 ದಿನಗಳಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಿದೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.
ಅಡ್ವೋಕೇಟ್ ಜನರಲ್ ಅವರ ಭರವಸೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ತಾ.ಪಂ.-ಜಿ.ಪಂ ಕ್ಷೇತ್ರಗಳ ಪುನರ್‌ವಿಂಗಡಣೆಗೆ ಸಂಬಂಧಿಸಿದ ಅಂತಿಮ ಅಧಿಸೂಚನೆಯನ್ನು 10 ದಿನಗಳಲ್ಲಿ ಹೊರಡಿಸಿ, ವರದಿಯನ್ನು ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು 2 ವಾರ ಮುಂದೂಡಿತು.
ಜತೆಗೆ ಇತರೆ ಹಿಂದುಳಿದ ವರ್ಗಗಳಿಗೆ (ಓಬಿಸಿ) ರಾಜಕೀಯ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರಚಿಸಿರುವ ಆಯೋಗಕ್ಕೆ 2023ರ ಮಾರ್ಚ್ 31ರೊಳಗೆ ವರದಿ ನೀಡುವಂತೆ 2022ರ ಡಿ.12ರಂದು ಸುಪ್ರೀಂಕೋರ್ಟ್ ಹೇಳಿದೆ.
ತಾ.ಪಂ-ಜಿ.ಪಂ ಕ್ಷೇತ್ರಗಳ ಮೀಸಲಾತಿ ವಿಚಾರದಲ್ಲೂ ರಾಜ್ಯ ಸರ್ಕಾರ ಅದರಂತೆ ಮುಂದುವರಿಯಬಹುದು ಎಂದು ನ್ಯಾಯಪೀಠ ಹೇಳಿದೆ.
ಇದೇ ವೇಳೆ ತಾ.ಪಂ.-ಜಿ.ಪಂ ಕ್ಷೇತ್ರಗಳ ಪುನರ್‌ವಿಂಗಡಣೆ ಪ್ರಕ್ರಿಯೆ ಹಾಗೂ ಅಂತಿಮ ವರದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರ ಪ್ರಮಾಣಪತ್ರವನ್ನು ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ ನ್ಯಾಯಯಪೀಠಕ್ಕೆ ಸಲ್ಲಿಸಿದರು. ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ವಾದ ಮಂಡಿಸಿದರು.